ಗಳಿಕೆ ರಜೆಗಾಗಿ ರಾಜ್ಯದ ಸರ್ಕಾರಿ ನೌಕರರ ಸಂಘದ ಪತ್ರ
ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಕ್ತಾಯಗೊಂಡಿದೆ. ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ಪೂರ್ಣಗೊಂಡಿದ್ದು, ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದ ಸರ್ಕಾರಿ ನೌಕರರು ಚುನಾವಣಾ ಕಾರ್ಯವನ್ನು ಮುಗಿಸಿಕೊಂಡು ಕೆಲಸಕ್ಕೆ ಹಾಜರಾಗಿದ್ದಾರೆ. ಶಿಕ್ಷಕರ ಬೇಸಿಗೆ ರಜೆಗಳು ಮುಗಿಯುತ್ತಿದ್ದು, ಮೇ 29ರಿಂದ ಶಾಲೆಗಳು ಆರಂಭವಾಗಲಿವೆ. ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರು ಈಗ ಚುನಾವಣಾ ಆಯೋಗದ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ.ಗಳಿಕೆ ರಜೆ ನೀಡಲು ಕೋರಿ ಪತ್ರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಎಸ್. ಷಡಾಕ್ಷರಿ ಅವರು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಮತಗಟ್ಟೆ ಮಟ್ಟದ (ಬಿ.ಎಲ್.ಓ) ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುವ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡುವ ಬಗ್ಗೆ ಎಂಬ ವಿಷಯವನ್ನು ಪತ್ರ ಒಳಗೊಂಡಿದೆ. ಅಲ್ಲದೇ ಬಿ.ಎಲ್.ಓ. ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮನವಿ ದಿನಾಂಕ 14/4/2024 ಉಲ್ಲೇಖ ಮಾಡಲಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯಾದ್ಯಂತ ಕರ್ತವ್ಯ ಶಿಕ್ಷಕರು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (ಬಿ.ಎಲ್.ಓ) ಚುನಾವಣಾ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವತ್ರಿಕ ರಜಾ ಅವಧಿಯಲ್ಲಿಯೂ ಸಹ ಕಾರ್ಯನಿರ್ವಹಿಸುತ್ತಿರುವುದರಿಂದ ಗೌರವಧನದ ಜೊತೆಗೆ ಗಳಿಕೆ ರಜೆಯನ್ನು ಮಂಜೂರು ಮಾಡುವಂತೆ ಉಲ್ಲೇಖಿತ ಪತ್ರದಲ್ಲಿ ಮನವಿ ಮಾಡಿಕೊಂಡಿರುತ್ತಾರೆ.
ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (ಬಿ.ಎಲ್.ಓ) ಚುನಾವಣೆಗಳಿಗೆ ಪೂರಕವಾದ ಕರ್ತವ್ಯಗಳನ್ನು ನಿರ್ವಹಿಸುವ ಶಿಕ್ಷಕರಿಗೆ ಗಳಿಕೆ ರಜೆಯನ್ನು ಮಂಜೂರು ಮಾಡುವ ಸಂಬಂಧ ಈ ಅಂಶಗಳನ್ನು ತಮ್ಮ ಅವಗಾಹನೆಗೆ ತರಬಯಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
* ಕರ್ನಾಟಕ ನಾಗರೀಕ ಸೇವಾ ನಿಯಮ 113(ಎ) ಪ್ರಕಾರ ರಜಾ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಗಳಿಕೆ ರಜೆಯನ್ನು ಪಡೆಯಲು ಅವಕಾಶವಿರುತ್ತದೆ. ಈ ಅಂಶಗಳ ಹಿನ್ನೆಲೆಯಲ್ಲಿ ಶಾಲಾ ಕರ್ತವ್ಯದ ಜೊತೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (ಬಿ.ಎಲ್.ಓ) ವರ್ಷಪೂರ್ತಿ ಚುನಾವಣೆಗೆ ಸಂಬಂಧಿಸಿದ ಪೂರಕ ಕಾರ್ಯಗಳನ್ನು ನಿರ್ವಹಿಸುತ್ತಿರುವ ಶಿಕ್ಷಕರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮ 113(ಎ)ರಲ್ಲಿನ ಅವಕಾಶದಂತೆ ಲಭ್ಯವಾಗುವ ಗಳಿಕೆ ರಜೆಯನ್ನು ಮಂಜೂರು ಮಾಡುವಂತೆ ಪತ್ರದಲ್ಲಿ ಕೋರಲಾಗಿದೆ.