ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ವಿಭಾಗ ಸ್ಥಾಪನೆ- ರಜಪೂತ
ಜಿಲ್ಲಾಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹೇಳಿಕೆ
ಯಾದಗಿರಿಃ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕನ್ನಡ ಅನುಷ್ಠಾನದ ವಿಭಾಗವನ್ನು ತೆರೆಯಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡದ ಬಗ್ಗೆ ಜಾಗೃತಿ ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹೆಚ್ಚುವರಿ ಅನುದಾನ ಮತ್ತು ಹಿಂದುಳಿದ ಜಿಲ್ಲೆಯಾಗಿರುವುದರಿಂದ ವಿಶೇಷ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ ಅವರಿಗೆ ಸೂಚಿಸಿದರು.
ಡಾ.ಸರೋಜಿನಿ ಮಹಿಷಿ ವರದಿಯ ಅನ್ವಯ ಎಲ್ಲಾ ಸರ್ಕಾರಿ/ ಖಾಸಗಿ ಸಂಸ್ಥೆಗಳ ಕಾರ್ಖಾನೆ, ಉದ್ದಿಮೆಗಳಲ್ಲಿ ಸಿ ಮತ್ತು ಡಿ ವೃಂದದ ನೌಕರರನ್ನು ನೇಮಕಾತಿ ಮಾಡಿಕೊಳ್ಳುವಾಗ ಕನ್ನಡಿಗರಿಗೆ ಕಡ್ಡಾಯವಾಗಿ ಮೀಸಲಾತಿ ನೀಡಬೇಕು. ಈ ಬಗ್ಗೆ ಪ್ರತಿ ಮೂರು ತಿಂಗಳಿಗೊಮ್ಮೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖಾ ಮ್ಯಾಗೇರಿ ಅವರಿಗೆ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಮಿತಿಯ ಸದಸ್ಯರಾದ ಶರಣು ಗದ್ದುಗೆ ಅವರು ಮಾತನಾಡಿ, ಗಡಿ ಭಾಗದ ಶಾಲೆಗಳಿಗೆ ಮುಂಚಿತವಾಗಿ ಕನ್ನಡ ಪುಸ್ತಕಗಳನ್ನು ಸರಬರಾಜು ಮಾಡಲು ಆದ್ಯತೆ ನೀಡಬೇಕು. ಸಿಬಿಎಸ್ಸಿ ಮತ್ತು ಐಸಿಎಸ್ ಪಠ್ಯಕ್ರಮದಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಅಳವಡಿಸಬೇಕು. ಗಡಿ ಭಾಗಗಳಲ್ಲಿ ನಂದೆಪಲ್ಲಿ, ಪರಮೇಶಪಲ್ಲಿ, ಬದ್ದೆಪಲ್ಲಿ, ಪಾಡಪಲ್ಲಿ ಹಾಗೂ ಇತರೆ ಹಳ್ಳಿಗಳಲ್ಲಿರುವ “ಪಲ್ಲಿ” ಎಂಬ ಶಬ್ದವನ್ನು ತೆಗೆದು ಹಾಕಿ “ಹಳ್ಳಿ” ಎಂದು ಕನ್ನಡೀಕರಣಗೊಳಿಸಬೇಕು ಎಂದು ಒತ್ತಾಯಿಸಿದರು.
ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಸಿ.ಎಂ.ಪಟ್ಟೇದಾರ ಅವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕನ್ನಡ ಬಳಕೆಯ ಸಮರ್ಪಕ ಅನುಷ್ಠಾನ ಆಗುತ್ತಿರುವ ಮತ್ತು ಆಗದಿರುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಸಮಿತಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಕನ್ನಡ ಭಾಷೆ, ನೆಲ ಕುರಿತು ಪ್ರತಿ ಮಾಹೆ ಒಂದು ವಿಶೇಷ ಉಪನ್ಯಾಸ, ವಿಚಾರ ಸಂಕಿರಣ, ಕನ್ನಡ ಜಾಗೃತಿ ಸಮಾವೇಶ ಹಾಗೂ ಇನ್ನಿತರ ಕನ್ನಡಪರ ಕಾರ್ಯಕ್ರಮಗಳನ್ನು ಕಾಲೇಜು ಮತ್ತು ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಏರ್ಪಡಿಸುವ ಕುರಿತು ಅಕ್ಟೋಬರ್ 12ರಂದು ಜಿಲ್ಲೆಗೆ ಆಗಮಿಸುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಜೊತೆ ಚರ್ಚಿಸುವ ಬಗ್ಗೆ ಸಮಿತಿಯ ಸದಸ್ಯರಾದ ನೀಲಕಂಠ ಬಡಿಗೇರ ಸೇರಿದಂತೆ ಎಲ್ಲಾ ಸದಸ್ಯರು ಇಲಾಖೆಯ ಸಹಾಯಕ ನಿರ್ದೇಶಕರನ್ನು ಒತ್ತಾಯಿಸಿದರು.
ಸಮಿತಿಯ ಸದಸ್ಯರಾದ ಅಯ್ಯಣ್ಣ ಹುಂಡೇಕಾರ ಅವರು ಮಾತನಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರ ಕೊರತೆ ಇದ್ದಲ್ಲಿ, ತಕ್ಷಣ ನೇಮಕ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಮಿಕ ಇಲಾಖೆಯ ನಿರೀಕ್ಷರಾದ ಶಿವಶಂಕರ ಬಿ.ತಳವಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.