ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೂರು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಾಗುವ ಪ್ರದೇಶಗಳ ಗರಿಷ್ಠ ತಾಪಮಾನದಲ್ಲಿ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಬಹುದು ಎಂದೂ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ 2023 ರ ಡಿಸೆಂಬರ್ನಿಂದ ಈ ಏಪ್ರಿಲ್ ವರೆಗೆ ಮಳೆಯಾಗಿರಲಿಲ್ಲ. ಆದರೆ, ಮುಂದಿನ ಐದು ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಮತ್ತು ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ. ಮುಂದಿನ ಐದು ದಿನಗಳಲ್ಲಿ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮೇ 21 ರವರೆಗೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಗುಡುಗು, ಮಿಂಚು ಸಹಿತ 7 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಮತ್ತು ಕರಾವಳಿ ಕರ್ನಾಟಕದ ಶೇ 75 ಕ್ಕಿಂತ ಹೆಚ್ಚು ಮತ್ತು ಉತ್ತರ ಒಳನಾಡಿನಲ್ಲಿ ಶೇ 25-50 ರಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಬರುವ ದಿನಗಳಲ್ಲಿ ಗರಿಷ್ಠ ನಿರೀಕ್ಷಿತ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ. ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಾರದು ಎಂಬ ಮಾಹಿತಿ ತಿಳಿದು ಬಂದಿದೆ.