Homeಪ್ರಮುಖ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಉಗ್ರರ ದಾಳಿ; ಮೂವರು ಭದ್ರತಾ ಸಿಬ್ಬಂದಿ ಗಾಯ

ಶ್ರೀನಗರ: ಜಮ್ಮು ಕಾಶ್ಮೀರದ ದೋಡಾದಲ್ಲಿ ಮಂಗಳವಾರ ರಾತ್ರಿ ಸೇನಾ ನೆಲೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಬಳಿಕ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಘಟನೆಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ದೋಡಾದಲ್ಲಿ ಭಯೋತ್ಪಾದಕರು ಭದರ್ವಾ-ಪಠಾಣ್‌ಕೋಟ್ ಹೆದ್ದಾರಿಯ ಚಟರ್ಗಲ್ಲಾ ಪ್ರದೇಶದಲ್ಲಿರುವ ಚೆಕ್‌ಪೋಸ್ಟ್ ಮೇಲೆ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಮರು ದಾಳಿ ನಡೆಸಿದರು. ಈ ವೇಳೆ ನಮ್ಮ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಭದ್ರತಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭಾರತೀಯ ಮಿಲಿಟರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ದಾಳಿ, ಕಥುವಾದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ನಡೆದ ಮೂರನೇ ಘಟನೆ ಇದಾಗಿದೆ. ಕಥುವಾ ದಾಳಿಯ ಕೆಲವೇ ಗಂಟೆಗಳ ಬಳಿಕ ಭಯೋತ್ಪಾದಕರು ಸೇನಾ ನೆಲೆ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಇದೇ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಸೋಮವಾರ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ನಮ್ಮ ಚೆಕ್‌ಪೋಸ್ಟ್ ಮೇಲೆ ದಾಳಿ ಮಾಡಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಸದ್ಯ ಘಟನಾ ಸ್ಥಳದಲ್ಲಿ ಉಗ್ರರ ಶೋಧಕ್ಕಾಗಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button