ರಾಜ್ಯದಲ್ಲಿ ಅಕ್ರಮವಾಗಿ ಅರಣ್ಯ ಒತ್ತುವರಿ ಮಾಡಿದವರಿಗೆ ಸಂಕಷ್ಟ: ನಾಳೆಯಿಂದ 10 ಜಿಲ್ಲೆಯಲ್ಲಿ ತೆರವು ಕಾರ್ಯ ಆರಂಭ

(Forest-encroachment:) ರಾಜ್ಯದಲ್ಲಿ ಅಕ್ರಮವಾಗಿ ಅರಣ್ಯ ಒತ್ತುವರಿ ಮಾಡಿದವರಿಗೆ ಸಂಕಷ್ಟ ಎದುರಾಗಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ನಾಳೆಯಿಂದ ಒತ್ತುವರಿ ತೆರವು ಕಾರ್ಯ ಆರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಮಾಹಿತಿ ನೀಡಿದ್ದಾರೆ.
ಹೌದು, ಶಿರೂರು ಬಳಿ ಗುಡ್ಡ ಕುಸಿತ ಹಾಗೂ ನೆರೆಯ ರಾಜ್ಯ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದ ದುರಂತಗಳಿಂದ ಹಲವು ಜೀವಗಳು ಬಲಿಯಾಗಿದೆ. ಗುಡ್ಡ ಕುಸಿತಕ್ಕೆ ಮೂಲ ಕಾರಣ ಮರಗಳ ಕಡಿತಲೆ, ಜೊತೆಗೆ ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ. ಇದರಿಂದ ಎಚ್ಚೆತ್ತ ಸರ್ಕಾರ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015 ರ ನಂತರ ಆಗಿರುವ ಒತ್ತುವರಿಗೆ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಅರಣ್ಯ ಖಾತೆ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಂಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಎಲ್ಲರೂ ಕಾನೂನಿನ ಮುಂದೆ ಸಮಾನರು. ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ. ಇಂಥಹ ಚಟುವಟಿಕೆಯಿಂದ ಪರಿಸರಕ್ಕೆ ಆಗುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.