Homeಜನಮನಪ್ರಮುಖ ಸುದ್ದಿ

ರಾಜ್ಯದಲ್ಲಿ ಹಣವನ್ನು ಲೂಟಿ ಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ- ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭ್ರಷ್ಟ ಕಾಂಗ್ರೆಸ್ ಸರ್ಕಾರವು ಹಣವನ್ನು ಲೂಟಿ ಮಾಡಿ, ಸಿಎಂ ಸಿದ್ದರಾಮಯ್ಯನವರು ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ ಇಂದು ಬಿಡದಿಯಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪಂಗಡದ ಪರವಾಗಿ, ಬಡ ಜನರ ಪರವಾಗಿ ಪ್ರಶ್ನಿಸಿದ ವಿಪಕ್ಷಕ್ಕೆ ಉತ್ತರ ಕೊಡಬೇಕಾದ ಆಡಳಿತ ಪಕ್ಷದವರು ವಿಪಕ್ಷಕ್ಕೇ ಮರುಪ್ರಶ್ನೆ ಹಾಕುತ್ತಿದ್ದಾರೆ. ಸಿದ್ದರಾಮಯ್ಯನವರೇ, ನೀವು ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಹಿಂದ ಅಭಿವೃದ್ಧಿ ಹೆಸರಿನಿಂದ ಅಧಿಕಾರಕ್ಕೆ ಬಂದಿದ್ದೀರಿ. ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದನ್ನು ಸ್ವತಃ ಮುಖ್ಯಮಂತ್ರಿಗಳಾದ ನೀವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ವಾಲ್ಮೀಕಿ ನಿಗಮದಲ್ಲಿ ಹಗರಣ ಆದುದನ್ನು ಒಪ್ಪಿಕೊಂಡಿದ್ದೀರಲ್ಲವೇ? ನೀವು ನಮಗೆ ಉತ್ತರ ನೀಡಬೇಕು ಎಂದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಧಿಕಾರದ ದರ್ಪ, ಅಧಿಕಾರದ ಅಹಂನಿಂದ ಡಿಕೆ ಶಿವಕುಮಾರ್ ಅವರು ಮಾತನಾಡುತ್ತಿದ್ದಾರೆ. ಅವರು ರಾಜ್ಯದ ಜನತೆಗೆ ಉತ್ತರ ನೀಡಬೇಕಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬಿಡದಿಯಲ್ಲಿರುವ ಟೊಯೊಟಾ ಫ್ಯಾಕ್ಟರಿ ಕೂಡ ಹೊರರಾಜ್ಯಕ್ಕೆ ಹೋಗುವ ಪರಿಸ್ಥಿತಿ ಉದ್ಭವವಾಗಿದೆ. ಹೊಸ ಉದ್ಯಮಗಳು, ಕೈಗಾರಿಕೆಗಳು ನಮ್ಮ ರಾಜ್ಯಕ್ಕೆ ಬರುತ್ತಿಲ್ಲ. ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ನಿಮ್ಮ ದುರಹಂಕಾರದ ನಡವಳಿಕೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಲೂಟಿ ಮಾಡುತ್ತ ಕುಳಿತಿದ್ದೀರಿ ಎಂದು ಆಕ್ರೊಶ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button