ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ
ಕರ್ನಾಟಕದ ಹಲವೆಡೆ ಕಳೆದ ಕೆಲ ದಿನಗಳಿಂದ ಜೋರು ಮಳೆಯಾಗುತ್ತಿದ್ದು ಬಿಸಿಲಿನ ಝಳ ಕಡಿಮೆಯಾಗಿದೆ. ಅಲ್ಲದೆ ಇಂದಿನಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 16ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಆರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ತೀವ್ರ ಗಾಳಿಯೊಂದಿಗೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯ ಸಿಂಚನವಾಗಲಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ಹಲವೆಡೆ ವರುಣ ಅರ್ಭ ಜೋರಾಗಲಿದೆ. ಅಲ್ಲದೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಹೇಗಿರಲಿದೆ ವಾತಾವರಣ?
ವರದಿಯ ಪ್ರಕಾರ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಇನ್ನೆರಡು ದಿನಗಳಲ್ಲಿ ರಾತ್ರಿಯ ಚಳಿ ಹೆಚ್ಚಾಗುವ ನಿರೀಕ್ಷೆ ಇದೆ.ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗಲಿನ ವೇಳೆಯಲ್ಲಿ ಶುಷ್ಕ ಮತ್ತು ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.