ಪ್ರಮುಖ ಸುದ್ದಿ

ಸರ್ವರಿಗೂ ಆರೋಗ್ಯ ಸೇವೆ ಸರ್ಕಾರದ ಕರ್ತವ್ಯ: ಬಿ.ಎಸ್.ಯಡಿಯೂರಪ್ಪ

ಯಾದಗಿರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಯಾದಗಿರಿಃ ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ಒದಗಿಸುವುದು ಸೇರಿದಂತೆ ಸರ್ವರಿಗೂ ಆರೋಗ್ಯ ಸೇವೆ ಒದಗಿಸುವುದು ನಮ್ಮ ಧ್ಯೇಯವಾಗಿದ್ದು,ಅದರಂತೆ ನಮ್ಮ ಸರಕಾರ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

ಯಾದಗಿರಿ ಸಮೀಪದ ಮುದ್ನಾಳ ಬಳಿ ಬುಧವಾರ ಯಿಮ್ಸ್ ಕಟ್ಟಡಕ್ಕೆ ಶಂಕುಸ್ಥಾಪನೆ,ನೂತನ ಜಿಲ್ಲಾಸ್ಪತ್ರೆಯ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಕಲ ಸೌಕರ್ಯ ಒಳಗೊಂಡಿರುವ ನೂತನ ಜಿಲ್ಲಾಸ್ಪತ್ರೆ ನಿರ್ಮಾಣ ಹಾಗೂ ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆರಂಭವಾಗುವುದರಿಂದ ಈ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಲಭಿಸಲಿದೆ ಎಂಬ ಆಶಾಭಾವನೆಯನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

ಎಂಬಿಬಿಎಸ್ ಪದವೀಧರರಿಗೆ ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವುದಕ್ಕೆ ಆದೇಶಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೇವೆ ಲಭ್ಯವಾಗುತ್ತಿದೆ ಎಂದರು.

455.84 ಕೋಟಿ ರೂ.ವೆಚ್ಚದ 11 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ 105.89 ಕೋಟಿ ರೂ.ವೆಚ್ಚದ 9 ವಿವಿಧ ಕಾಮಗಾರಿಗಳು ಸೇರಿದಂತೆ 560.66 ಕೋಟಿ ರೂ.ವೆಚ್ಚದ ಅಭಿವೃದ್ಧಿ ಕೆಲಸಗಳಿಗೆ ಅತ್ಯಂತ ಸಂತೋಷದಿಂದ ಚಾಲನೆ ನೀಡಿದ್ದೇನೆ ಎಂದು ಹೇಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯಾದಗಿರಿ ಶಾಸಕರಾದ ವೆಂಕಟರೆಡ್ಡಿ ಮುದ್ನಾಳ್ ಹಾಗೂ ಸಂಸದ ರಾಜಾ ಅಮರೇಶ್ವರ ನಾಯಕ್ ಅವರ ಬೇಡಿಕೆಗಳನ್ನು ಈಡೇರಿಸಲು ಕ್ರಮಕೈಗೊಳ್ಳುವುದಾಗಿಯೂ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ನರಸಿಂಹ ನಾಯಕ(ರಾಜುಗೌಡ), ಸಂಸದರಾದ ರಾಜಾ ಅಮರೇಶ್ವರ ನಾಯಕ, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಜಿಲ್ಲಾಧಿಕಾರಿ ಡಾ. ರಾಗಪ್ರಿಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button