ಗಿರಿನಾಡು ಯಾದಗಿರಿ ಜಿಲ್ಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಸಂಚಾರ, ಕಾಂಗ್ರೆಸ್ಸಲ್ಲಿ ಸಂಚಲನ!
ಯಾದಗಿರಿ: ಗಿರಿನಾಡು ಯಾದಗಿರಿ ಜಿಲ್ಲೆಯಲ್ಲಿ ಡಿಸೆಂಬರ್ 17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಚಾರ ಮಾಡಲಿದ್ದಾರೆ. ವಿವಿಧ ಸಭೆ, ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದು, ಕೋಟ್ಯಾಂತರ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ಸುರಪುರ ತಾಲೂಕಿನ ಹುಣಸಗಿ ಪಟ್ಟಣಕ್ಕೆ ಆಗಮಿಸಲಿದ್ದು 65.33 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜೆನಗಳಿಗೆ ಚಾಲನೆ ನೀಡಲಿದ್ದಾರೆ.
ಮದ್ಯಾನ 1ಗಂಟೆಗೆ ಶಹಾಪುರ ತಾಲೂಕಿನ ಭೀಮರಾಯನ ಗುಡಿ ಗ್ರಾಮದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪುರ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸಾವಿರಾರು ಜನ ಸೇರುವ ನಿರೀಕ್ಷೆಯಿದೆ. ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಇತರೆ ಸಚಿವರು, ಕಾಂಗ್ರೆಸ್ ಪಕ್ಷದ ಗಣ್ಯರು ಭಾಗಿಯಾಗಲಿದ್ದಾರೆ.
ಸಂಜೆ 4ಗಂಟೆಗೆ ಗುರುಮಿಠ್ಕಲ್ ಪಟ್ಟಣದಲ್ಲಿ ಸುಮಾರು 576ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಬೃಹತ್ ಸಮಾವೇಶದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ರಾತ್ರಿ 7ಗಂಟೆ ಸುಮಾರಿಗೆ ಯಾದಗಿರಿ ನಗರಕ್ಕೆ ತೆರಳಿ ಹೊಸ ಪ್ರವಾಸಿ ಮಂದಿರದಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಸಿಎಂ ಸಿದ್ಧರಾಮಯ್ಯ ಯಾದಗಿರಿ ಜಿಲ್ಲೆಯ ಪ್ರದಕ್ಷಿಣೆ ಹಾಕಲಿದ್ದು ಕಾಂಗ್ರೆಸ್ ಪಕ್ಷದಲ್ಲಿ ಹೊಸ ಸಂಚಲನ ಮೂಡಲಿದೆ. ಅಲ್ಲದೆ ಕಾಂಗ್ರೆಸ್ ಪಕ್ಷದ ಮೇಲೆ ಮುನಿಸಿಕೊಂಡಿದ್ದ ಯಾದಗಿರಿ ಶಾಸಕ ಡಾ.ಎ.ಬಿ.ಮಾಲಕರೆಡ್ಡಿ, ಬಾಬುರಾವ್ ಚಿಂಚನಸೂರ ಸೇರಿದಂತೆ ಇತರೆ ನಾಯಕರೊಂದಿಗೂ ಸಿಎಂ ಮಾತುಕತೆ ನಡೆಸಲಿದ್ದಾರೆ. ಆ ಮೂಲಕ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿ ಪಕ್ಷದಲ್ಲಿ ಹೊಸ ಹುಮ್ಮಸ್ಸು ಮೂಡಿಸಲಿದ್ದಾರೆ ಎನ್ನಲಾಗುತ್ತಿದೆ.