ಸಗರ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಿತಿ ಗಂಭೀರ
ಸಗರ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಿತಿ ಗಂಭೀರ
yadgiri, ಶಹಾಪುರಃ ಸರ್ಕಾರಿ ಶಾಲಾ ಕಟ್ಟಡ ಮೇಲಿಂದ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಸ್ಥಿತಿ ಗಂಭೀರವಾದ ಘಟನೆ ತಾಲೂಕಿನ ಸಗರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಚಂಡಿನಾಟ ಆಡುತ್ತಿದ್ದ ಬಾಲಕ ಶಾಲಾ ಕಟ್ಟಡದ ಮೇಲೆ ಬಿದ್ದ ಚಂಡು ತರಲು ಹೋಗಿ ಕಟ್ಟಡ ಮೇಲಿಂದ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಲ್ಬುರ್ಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಿಯಾಜುದ್ದೀನ್ ತಂದೆ ಸರಮುದ್ದೀನ್ (9) ಎಂಬಾ ಬಾಲಕನೇ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಅದೇ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ಬಾಲಕ ರಿಯಾಜುದ್ದೀನ್ ಅಭ್ಯಾಸ ಮಾಡುತ್ತಿದ್ದಾನೆ. ಜೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದಿರುವದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದೆ ಎನ್ನಲಾಗಿದೆ.
ಶಾಲೆ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿ ಸ್ಥಳಾಂತರಿಸಲು ಶಾಲಾ ಮುಖ್ಯಗುರುಗಳು ಸೇರಿದಂತೆ ಪಾಲಕರು ಸಾಕಷ್ಟು ಬಾರಿ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಈ ಘಟನೆಗೆ ಜೆಸ್ಕಾಂ ಅಧಿಕಾರಿಗಳ ಬೇಜವಬ್ದಾರಿ ವರ್ತನೆಯೇ ಕಾರಣವೆಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ಸಯ್ಯದ್ ಖಾಲಿದ್ ಆರೋಪಿಸಿದ್ದು, ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ನಿರ್ಲಕ್ಷವಹಿಸಿದ ಜೆಸ್ಕಾಂ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.