ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣ: ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ವಿಡಿಯೋ ಸಂವಾದ
curfyu ಕಟ್ಟುನಿಟ್ಟಾಗಿ ಜಾರಿ ಮಾಡಲು ಜಿಲ್ಲಾಧಿಕಾರಿ ಸೂಚನೆ
ಯಾದಗಿರಿ; ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡುತ್ತಿದ್ದರು.
ಗ್ರಾಮೀಣ ಭಾಗದಲ್ಲಿ ಕಫ್ರ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಗ್ರಾಮಮಟ್ಟದ ಕಾರ್ಯಪಡೆ ( ಟಾಸ್ಕ್‍ಫೋರ್ಸ್) ಸಮಿತಿ ಸಭೆಯನ್ನು ಕಾಲಕಾಲಕ್ಕೆ ಕರೆದು, ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಅನಾವಶ್ಯಕವಾಗಿ ಓಡಾಡುವ ಜನರಿಗೆ ದಂಡ ವಿಧಿಸಬೇಕು ಅವರು ಹೇಳಿದರು.
ಗ್ರಾಮಗಳಲ್ಲಿ ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿ ವ್ಯಾಪಾರ-ವಹಿವಾಟು ಮಾಡುತ್ತಿದ್ದರೆ ಅಂತಹ ಅಂಗಡಿ ಮಾಲೀಕರ ವಿರುದ್ಧ ದಂಡ ಜೊತೆಗೆ ಎಫ್‍ಐಆರ್ ದಾಖಲಿಸಬೇಕು ಎಂದು ಅವರು ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಆದೇಶಿಸಿದರು.
ಪ್ರತಿದಿನ ಕ್ವಾರಾಂಟೈನ್‍ನಲ್ಲಿರುವವರ ಮನೆ-ಮನೆಗಳಿಗೆ ಭೇಟಿ ನೀಡಿ ಕ್ಯಾರೆಂಟೈನ್ಸ್ ವಾಚ್ ಆಪ್‍ನಲ್ಲಿ ಅವರ ಪೋಟೋಗಳನ್ನು ಅಪಲೋಡ್ ಮಾಡಿ ಪ್ರತಿಶತ 100 ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಇನ್ನು ನಗರ ಪ್ರದೇಶಗಳಲ್ಲೂ ಇಂತದ್ದೇ ಕ್ರಮಗಳನ್ನು ಕೈಗೊಳ್ಳಬೇಕು. ತರಕಾರಿ-ದಿನಸಿ ಅಂಗಡಿಗಳನ್ನು ಬೆಳಿಗೆ 6 ಗಂಟೆಯಿಂದ ಮಧ್ಯಾಹ್ನ 12ವರೆಗೆ ಮಾತ್ರ ತೆರೆಯಲು ಅವಕಾಶ ನೀಡಬೇಕು. ಅಂಗಡಿಗಳ ಮುಂದೆ ಜನದಟ್ಟಣೆಯಾಗದಂತೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತರು ಮತ್ತು ಪುರಸಭೆಗಳ ಮುಖ್ಯಾಧಿಕಾರಿಗಳಿಗೆ ಅವರು ಸೂಚಿಸಿದರು.
ವಿಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳು ಪ್ರಕಾಶ.ಜಿ. ರಜಪೂತ, ನಗರಸಭೆ ಪೌರಾಯುಕ್ತರು, ಪುರಸಭೆಗಳ ಮುಖ್ಯಾಧಿಕಾರಿಗಳು, ತಹಸೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮುಂತಾದವರು ಹಾಜರಿದ್ದರು.