ಲೋಕಸಭಾ ಚುನಾವಣೆಯ ಮತ ಎಣಿಕೆ: ಜೂನ್ 4, 5 ರಂದು ರಾಜ್ಯಾದ್ಯಂತ ನಿಷೇದಾಜ್ಞೆ ಜಾರಿ..!
ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್ 4 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನೆಲೆ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಜೂನ್ 4 ರ ಬೆಳಗ್ಗೆ 6 ಗಂಟೆಯಿಂದ ಜೂನ್ 5 ರ ಬೆಳಗ್ಗೆ 6 ಗಂಟೆಯವರೆಗೆ ರಾಜ್ಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಈ ಸಂಬಂಧ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ನಿಷೇದಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದಿದ್ದಾರೆ.
ಈ ಸಂದರ್ಭ ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕ ವಸ್ತು ಒಯ್ಯತಕ್ಕುದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಂತಹ ವಸ್ತುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ.
ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.