ಬಿಜೆಪಿ ಶಾಸಕ ಮುನಿರತ್ನ ಬೆಂಬಲಿಗರಿಂದ ಸಂತ್ರಸ್ತ ಮಹಿಳೆಗೆ ಬೆದರಿಕೆ, ಆಡಿಯೋ ವೈರಲ್..!
ಬೆಂಗಳೂರು: ಘನ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿರುವ ಮತ್ತು ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಶಾಸಕರ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಪ್ರಕರಣದ ಸಾಕ್ಷಿಗಳಿಗೆ ಮುನಿರತ್ನ ಅವರ ಬೆಂಬಲಿಗರು ಬೆದರಿಕೆ ಹಾಕಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಈ ಕುರಿತ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೆವೆ. ನಿಮ್ಮ ವಂಶವೇ ಇರದಂತೆ ಮಾಡುತ್ತೇವೆ ಎಂದು ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಎಂಬುವರಿಂದ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ಆರೋಪಿ ಸುನಂದಮ್ಮ ಹಾಗೂ ಬೆಂಬಲಿಗರು, ಸಾಕ್ಷಿಯ ಮನೆಗೆ ಏಕಾಏಕಿ ನುಗ್ಗಿ ಸಂತ್ರಸ್ಥೆಯ ಮಗನಿಗೆ ಬೆದರಿಕೆ ಹಾಕಿದ್ದಾರೆ ಎಂದು ಯಶವಂತಪುರ ಪೊಲೀಸ್ ಠಾಣೆಗೆ ಸಂತ್ರಸ್ಥೆಯ ಮಗ ದೂರು ನೀಡಿದ್ದಾರೆ. ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.