ಬೆಂಗಳೂರು: ಮೋಟಾರು ವಾಹನ ಕಾಯ್ದೆ ಅನ್ವಯ ಹೆಡ್‌ಲೈಟ್ ಅಳವಡಿಸಿಕೊಳ್ಳಲು ಸೂಚನೆ
ಬೆಂಗಳೂರು: ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳ ಬದಲಿಗೆ ಕೇಂದ್ರದ ಮೋಟಾರ್ ಕಾಯ್ದೆ ಅನ್ವಯ ಎಲ್ಲ ವಾಹನಗಳಿಗೆ ಕಡ್ಡಾಯವಾಗಿ ಹೆಡ್ ಲೈಟ್‌ಗಳನ್ನು ಅಳವಡಿಸಿಕೊಳ್ಳಬೇಕು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಆದೇಶ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸಲಾಗುತ್ತಿದೆ. ಪರಿಣಾಮ ಇತರ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಆದರಿಂದ ಎಲ್ಲ ವಾಹನ ಸವಾರರು ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ನಿಗದಿತ ಹೆಡ್ ಲೈಟ್‌ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘಿಸಿದರೆ, ಅಂತಹ ವಾಹನ ಸವಾರರ ವಿರುದ್ಧ ಕೇಸ್ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಬೇಕು. ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸಿರುವುದು ಕಂಡುಬಂದರೆ ಜುಲೈನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆದೇಶದಲ್ಲಿ ಸೂಚಿಸಿದ್ದಾರೆ.