ನವೆಂಬರ್ ನಲ್ಲಿ ನಡೆಯಬೇಕಿದ್ದ ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ರದ್ದು!
(ಸಾಂದರ್ಭಿಕ ಚಿತ್ರ)
ಮಂಗಳೂರು : ರಾಜ್ಯದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿರುವ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವತಿಯಿಂದ ಪ್ರತಿವರ್ಷ ಆಯೋಜಿಸಲಾಗುತ್ತಿದ್ದ ಆಳ್ವಾಸ್ ನುಡಿಸಿರಿ ವಿರಾಸತ್ ನ್ನು ರದ್ದುಗೊಳಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅದ್ಯಕ್ಷ ಡಾ.ಎಂ.ಮೋಹನ್ ಆಳ್ವಾಸ್ ತಿಳಿಸಿದ್ದಾರೆ. ಈವರ್ಷ ನವೆಂಬರ್ 14ರಿಂದ 17ರವರೆಗೆ ನಡೆಯಬೇಕಿದ್ದ ನುಡಿಸಿರಿ ಕಾರ್ಯಕ್ರಮ ರದ್ದುಗೊಳಿಸಲಾಗಿದ್ದು ಕಾರ್ಯಕ್ರಮಕ್ಕೆ ಖರ್ಚಾಗುತ್ತಿದ್ದ ಹಣವನ್ನು ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.
ಉತ್ತರ ಕರ್ನಾಟಕ ಸೇರಿದಂತೆ ದೇಶದ ಮೂಲೆಮೂಲೆಯಿಂದ ನುಡಿಸಿರಿಗೆ ಸಾಹಿತ್ಯ ಅಭಿಮಾನಿಗಳು ಆಗಮಿಸುತ್ತಿದ್ದರು. ಆದರೆ, ರಾಜ್ಯದಲ್ಲಿ ಜನ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ನುಡಿಸಿರಿ ಕಾರ್ಯಕ್ರಮ ಬದಲು ನೆರವಿನ ಕಾರ್ಯವೇ ಸರಿ ಎಂದು ನಿರ್ಧರಿಸಲಾಗಿದೆ. ಮುಂದಿನ ವರ್ಷ ಎಂದಿನಂತೆ ನುಡಿಸಿರಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.