ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್ : 7ನೇ ವೇತನ ಆಯೋಗ ಜಾರಿ..! ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಸಂಕಷ್ಟ
ಬೆಂಗಳೂರು: ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ನಿರ್ಧರಿಸಿದ್ದು, ಈ ನಡುವಲ್ಲೇ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ.
ಅಧಿಕಾರಕ್ಕೆ ಬರುವುದಕ್ಕೂ ಮುನ್ನ 2023 ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದಗಳನ್ನು ಯಾವುದೇ ವಿಳಂಬ ನೀತಿ ಅನುಸರಿಸದೆ ಭರ್ತಿ ಮಾಡುತ್ತೇವೆಂದು ಭರವಸೆ ನೀಡಿದ್ದರು. ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರಕ್ಕೆ ವಾರ್ಷಿಕ 20,000 ಕೋಟಿ ರೂ. ಬೇಕಾಗುತ್ತದೆ. ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುತ್ತೇವೆಂದು ಹೇಳಿದ್ದರು.
ಇದೀಗ ಗ್ಯಾರಂಟಿ ಯೋಜನೆ ಹಾಗೂ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಹಣ ಒದಗಿಸಬೇಕಾಗಿದ್ದು, ಈ ನಡುವಲ್ಲೇ ಖಾಲಿ ಹುದ್ದೆಗಳ ಭರ್ತಿ ಸರ್ಕಾರಕ್ಕೆ ಆರ್ಥಿಕ ಸಂಕಷ್ಟವನ್ನು ಎದುರು ಮಾಡಲಿದೆ ಎಂದು ಹೇಳಲಾಗುತ್ತಿದೆ. ಪರಿಸ್ಥಿತಿಯನ್ನು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದು, ನೇಮಕಾತಿಯ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ. ಅದಾಗ್ಯೂ ವಿವಿಧ ಇಲಾಖೆಗಳು ಸಲ್ಲಿಸಿರುವ ಪ್ರಸ್ತಾವನೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಕ್ರಮಗಳ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
7.7 ಲಕ್ಷ ಮಂಜೂರಾದ ಹುದ್ದೆಗಳ ಪೈಕಿ 72 ಇಲಾಖೆಗಳಲ್ಲಿ 5.2 ಲಕ್ಷ ನೌಕರರು ಕಾರ್ಯನಿರ್ವಹಿಸತ್ತಿದ್ದಾರೆ. ಕೃಷಿ, ಗೃಹ, ನಗರಾಭಿವೃದ್ಧಿ, ಆರೋಗ್ಯ, ಪ್ರವಾಸೋದ್ಯಮ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು, ವಿದ್ಯುತ್, ಜಲಸಂಪನ್ಮೂಲ, ಅಬಕಾರಿ, ವೈದ್ಯಕೀಯ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಒಟ್ಟು 2.50 ಲಕ್ಷ ಹುದ್ದೆಗಳು ಖಾಲಿ ಇವೆ. ಕೆಲವು ಖಾಲಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ವಿವಿಧ ಇಲಾಖೆಗಳಿಂದ ಪ್ರತಿ ವರ್ಷ ಸರಾಸರಿ 200 ಪ್ರಸ್ತಾವನೆಗಳು ಬರುತ್ತಿವೆ ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿವೆ. ಪ್ರತಿಯೊಂದು ಪ್ರಸ್ತಾವನೆಯಲ್ಲಿಯೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮನವಿ ಇರುತ್ತದೆ. ಆರೋಗ್ಯ, ಶಿಕ್ಷಣ, ಪೊಲೀಸ್ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳಿಂದ ಮನವಿ ಪತ್ರಗಳು ಹೆಚ್ಚಾಗಿ ಬರುತ್ತಿವೆ. ಹಣಕಾಸಿನ ಪರಿಣಾಮಗಳನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕಿದೆ. ಸಿಬ್ಬಂದಿ ಕೊರತೆ ತೀವ್ರವಾಗಿರುವ ಇಲಾಖೆಗಳಲ್ಲಿ ಕೆಲವು ಹುದ್ದೆಗಳಿಗೆ ಮಾತ್ರ ಮಂಜೂರಾತಿ ನೀಡುತ್ತಿದ್ದೇವೆಂದು ಮೂಲಗಳು ತಿಳಿಸಿವೆ.
ಎಲ್ಲಾ ಖಾಲಿ ಹುದ್ದೆಗಳಿಗೆ ನೇಮಕಾತಿಗಳನ್ನು ನಡೆಸಿದರೆ, 7ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ನಾವು ಪಾವತಿಸಲು ಬದ್ಧರಾಗಿರಬೇಕಿದೆ. ಇದರ ಜೊತೆಗೆ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ ಮೀಸಲಿಡಬೇಕಿದೆ. ಇದಲ್ಲದೆ, ಗುತ್ತಿಗೆದಾರರ ಹಲವಾರು ಕೋಟಿ ರೂಪಾಯಿಗಳ ಬಾಕಿ ಮತ್ತು ಇತರ ಬಾಕಿ ಬಿಲ್‌ಗಳನ್ನು ತೆರವುಗೊಳಿಸಬೇಕಾಗಿದೆ. ಹೀಗಾಗಿ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗುವುದರಿಂದ ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹಣಕಾಸು ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.
ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾತನಾಡಿ, ಸರ್ಕಾರ ತನ್ನ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿದರೆ ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತದೆ. ವಿವಿಧ ಇಲಾಖೆಗಳ ನೌಕರರ ಮೇಲಿನ ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕೆಂಬುದು ನಮ್ಮ ಬಹುದಿನಗಳ ಬೇಡಿಕೆಯಾಗಿದೆ ಎಂದು ಹೇಳಿದ್ದಾರೆ