ವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬಗ್ಗೆ ರಾಜ್ಯಾದ್ಯಂತ ತೀವ್ರ ಚರ್ಚೆಯಾದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಾರೆ. ಸಿಎಂ ಸಭೆಯಲ್ಲಿಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 20%ರಷ್ಟು ಗ್ರೇಸ್ ಮಾರ್ಕ್ಸ್ ನೀಡಿದರ ಬಗ್ಗೆ ಚರ್ಚೆ ನಡೆಸಲಾಗಿದೆ. ಯಾರನ್ನ ಕೇಳಿ ಹೆಚ್ಚುವರಿ ಅಂಕ ಕೊಟ್ರಿ. ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿಯನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಸಲ ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ್ದಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿದೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗ್ರೇಸ್ ಮಾರ್ಕ್ಸ್ ಕೊಡೋದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರ್ತೀವೆ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್ ಮಾರ್ಕ್ಸ್ ಕೊಡುವ ಬಗ್ಗೆ ಮರು ಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ್ದಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿಕೆ ನೀಡಿದ್ದಾರೆ. ಯಾವಾಗಲೂ ಗ್ರೇಸ್ ಮಾರ್ಕ್ಸ್ ಶೇಕಡಾ 5ರಷ್ಟು ಇತ್ತು. ಕೊರೊನಾ ಸಂದರ್ಭದಲ್ಲಿ ಶೇಕಡಾ 10 ರಷ್ಟು ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳಿಗೆ ಕಾನ್ಫಿಡೆಂಟ್ ಕೊಟ್ಟು ಪಾಸ್ ಮಾಡಲು ಶೇಕಡಾ 20 ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಇದು ಈ ವರ್ಷಕ್ಕೆ ಯಾವ ಸಮಸ್ಯೆ ಇಲ್ಲ. ಮುಂದಿನ ವರ್ಷದಿಂದ ಶೇ.20 ಗ್ರೇಸ್ ಮಾರ್ಕ್ಸ್ ಇರಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.