ಪ್ರಮುಖ ಸುದ್ದಿ

ಜಂತುಹುಳು ನಾಶಕ ಮಾತ್ರೆಯ ಅರಿವು ಮೂಡಿಸಿ- ಡಿಸಿ ಕೂರ್ಮಾರಾವ್

ಸೆ.25 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ

ಯಾದಗಿರಿಃ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 25 ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ ಯಶಸ್ವಿಯಾಗಲು ಜಂತು ಹುಳು ನಾಶಕ ಅಲ್ಬೆಂಡ್‍ ಜೋಲ್ ಮಾತ್ರೆಗಳ ಪ್ರಯೋಜನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ದಿನಾಚರಣೆಯಲ್ಲಿ ಜಿಲ್ಲೆಯ 1ರಿಂದ 19 ವರ್ಷದೊಳಗಿನ ಒಟ್ಟು 3,41,359 ಮಕ್ಕಳಿಗೆ ಅಲ್ಬೆಂಡ್‍ಜೋಲ್ ಮಾತ್ರೆಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಸೆ.25ರಂದು ಸರ್ಕಾರಿ, ಖಾಸಗಿ ಶಾಲಾ-ಕಾಲೇಜು, ಅಂಗನವಾಡಿ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಅಲ್ಬೆಂಡ್‍ಜೋಲ್ ಮಾತ್ರೆಗಳನ್ನು ನೀಡಬೇಕು. ಅಲ್ಲದೆ, ಪ್ರಾಥಮಿಕ ಹಾಗೂ ಉಪ ಆರೋಗ್ಯ ಕೇಂದ್ರಗಳಲ್ಲಿ ಮಾತ್ರೆಗಳನ್ನು ವಿತರಿಸುವ ಮೂಲಕ ಪ್ರತಿಶತ ಸಾಧನೆ ಮಾಡಬೇಕು.

ಕಳೆದ ಬಾರಿ ಖಾಸಗಿ ಶಾಲೆಗಳಲ್ಲಿ ಹೊಂದಿದ ಗುರಿ ಸಾಧನೆಯಲ್ಲಿ ಹಿನ್ನಡೆಯಾಗಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಅಲ್ಬೆಂಡ್‍ಜೋಲ್ ಮಾತ್ರೆ ಚೀಪುವುದರಿಂದ ಮಕ್ಕಳಲ್ಲಿ ರಕ್ತ ಹೀನತೆ ನಿಯಂತ್ರಣ ಮತ್ತು ಪೋಷಕಾಂಶ ಹೀರಿಕೆಯನ್ನು ಸುಧಾರಿಸುತ್ತದೆ.

ಆದ್ದರಿಂದ ಖಾಸಗಿ ಶಾಲೆ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಿಗೆ ಡಿಡಿಪಿಐ ಹಾಗೂ ಡಿಡಿಪಿಯು ಅವರಿಂದ ಇ-ಮೇಲ್ ಮೂಲಕ ಮಾಹಿತಿ ನೀಡಬೇಕು. ಜೊತೆಗೆ ಸರ್ಕೂಲರ್, ವಾಟ್ಸ್‍ಆ್ಯಪ್, ಟೆಕ್ಸ್ಟ್ ಸಂದೇಶ, ಪೋನ್ ಕರೆ ಮೂಲಕ ಸಂವಹನ ನಡೆಸಿ. ಕಾರ್ಯಕ್ರಮ ಯಶಸ್ವಿಗೊಳಿಸಲು ಸಾಧ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಜಿಲ್ಲೆಯ ನಗರಸಭೆ ಹಾಗೂ ಪುರಸಭೆಗಳ ಕಸ ವಿಲೇವಾರಿ ವಾಹನಗಳ ಮೂಲಕ ದಿನಾಚರಣೆ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕು. ಅದರಂತೆ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಸೆ.24ರಂದು ಬೆಳಿಗ್ಗೆ ಮತ್ತು ಸಂಜೆ ಹಾಗೂ ಸೆ.25ರಂದು ಬೆಳಿಗ್ಗೆ ಡಂಗೂರ ಸಾರಬೇಕು. ಕಾರ್ಯಕ್ರಮದ ಯಶಸ್ವಿ ಕೇವಲ ಅಧಿಕಾರಿಗಳಿಂದ ಮಾತ್ರ ಸಾಧ್ಯವಿಲ್ಲ.

ಜನಪ್ರತಿನಿಧಿಗಳು, ಸಾರ್ವಜನಿಕರು ಪಾಲ್ಗೊಳ್ಳುವುದರಿಂದ ಯಶಸ್ವಿಯಾಗುತ್ತದೆ. ಹಾಗಾಗಿ, ಸ್ಥಳೀಯ ಜನ ಪ್ರತಿನಿಧಿಗಳಿಗೆ ಮಾಹಿತಿ ನೀಡಬೇಕು. ವಾರ್ಡ್‍ಗಳಲ್ಲಿ ಸಣ್ಣ-ಸಣ್ಣ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಜಿಲ್ಲೆಯಲ್ಲಿ ಗುರಿ ಹೊಂದಿದ ಎಲ್ಲಾ ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆ ತಲುಪಲು ಶ್ರಮಿಸಬೇಕು ಎಂದು ಅವರು ಸಲಹೆ ನೀಡಿದರು.

Related Articles

Leave a Reply

Your email address will not be published. Required fields are marked *

Back to top button