ಫೆ.1ರಂದು ಮಡಿವಾಳ ಮಾಚಿದೇವರ ಜಯಂತ್ಯುತ್ಸವ
ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
ಯಾದಗಿರಿಃ ಜಿಲ್ಲಾಡಳಿತದ ವತಿಯಿಂದ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಫೆಬ್ರುವರಿ 1ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಮಡಿವಾಳ ಮಾಚಿದೇವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಾಲ್ಲೂಕು ಮಟ್ಟದಲ್ಲಿಯೂ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು.
ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಪದವಿ ಮಹಾವಿದ್ಯಾಲಯದಿಂದ ಸುಭಾಷ್ ವೃತ್ತ ಮತ್ತು ಶಾಸ್ತ್ರೀ ವೃತ್ತದ ಮಾರ್ಗವಾಗಿ ವಿದ್ಯಾಮಂಗಲ ಕಾರ್ಯಾಲಯದ ವರೆಗೆ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು ಎಂದು ಮಡಿವಾಳ ಮಾಚಿದೇವ ಜಯಂತ್ಯೋತ್ಸವ ಸಂಘದವರು ಸಭೆಯಲ್ಲಿ ತಿಳಿಸಿದರು.
ಇದಕ್ಕೆ ಸಮ್ಮತಿಸಿದ ಅಪರ ಜಿಲ್ಲಾಧಿಕಾರಿಗಳು, ಮೆರವಣಿಗಾಗಿ ಸಂಘಕ್ಕೆ ಒಂದು ದಿನ ಮುಂಚಿತವಾಗಿ ಟ್ರ್ಯಾಕ್ಟರ್ ನೀಡುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಸ್ಥಳೀಯ ನುರಿತ ಕಲಾತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕøತ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಟೀ, ಟಿಫಿನ್ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ವಹಿಸಲಾಯಿತು. ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು.
ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳನ್ನು ನೇಮಕ ಮಾಡಲಾಯಿತು. ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್ ಅವರು ಸಭೆಯ ನಡಾವಳಿ ಓದಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ, ಸಮಾಜ ಮುಖಂಡರಾದ ಮಹಾದೇವಪ್ಪ ಯಲಸತ್ತಿ, ವಕೀಲರಾದ ನಾಗಪ್ಪ, ಸಾಬಣ್ಣ ಮಡಿವಾಳ, ಚನ್ನಪ್ಪ ಮಡಿವಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.